Chikmagaluru News

ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ !

ನ.ರಾ.ಪುರ : ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಸೂರುಗುಡಿಗೆಯ ದೇವಸ್ಥಾನದ ಸಮೀಪದ ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ.

WhatsApp Group Join Now
Telegram Group Join Now
Instagram Group Join Now

ಕಣಿವೆ ಗ್ರಾಮದ ಸೂರುಗುಡಿಗೆಯಲ್ಲಿ ಮಂಗಳವಾರ ಬೆಳಿಗ್ಗೆ ಗ್ರಾಮದ ನೀರುಗಂಟಿ ಶ್ರೀನಿವಾಸ್ ಅವರು ನೀರು ಸರಬರಾಜು ಮಾಡಲು ತೆರಳಿದಾಗ ದೇವಸ್ಥಾನದ ಸಮೀಪದ ಪೊದೆಯಲ್ಲಿ ಮಗು ಅಳುವ ಶಬ್ದ ಕೇಳಿ ಬಂದಿದೆ. ಸ್ಥಳಕ್ಕೆ ಹೋಗಿ ನೋಡಿದಾಗ ರಕ್ತ-ಸಿಕ್ತವಾದ ಶಿಶುವನ್ನು ಟವೆಲ್‌ನಲ್ಲಿ ಸುತ್ತಿ ಇಡಲಾಗಿತ್ತು. ಈ ವಿಷಯವನ್ನು ಗ್ರಾಮಸ್ಥರಿಗೆ ಮುಟ್ಟಿಸಿದ ಶ್ರೀನಿವಾಸ್, ಶಿಶುವನ್ನು ಮನೆಗೆ ತೆಗೆದುಕೊಂಡು ಆರೈಕೆ ಮಾಡಿದ್ದಾರೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಹಾಗೂ ಗ್ರಾಮಸ್ಥ ಅವಿನಾಶ್ ಪೊಲೀಸರಿಗೆ ಮಾಹಿತಿ ನೀಡಿದರು.

ಕೂಡಲೇ ಸ್ಥಳಕ್ಕೆ ಬಂದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಶಿಶುವಿನ ಆರೈಕೆ ಮಾಡಿ ಆಂಬುಲೆನ್ಸ್‌ನಲ್ಲಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಬಗ್ಗೆ ಕರೆ ಬಂದ ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿ ಕಳುಹಿಸಿ, ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಕಂಡು ಬಂದಿದ್ದರಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಶಿಶು 2.50 ಕೆ.ಜಿ ತೂಕವಿದೆ ಎಂದು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಮಾಹಿತಿ ನೀಡಿದ್ದಾರೆ.

ಶಿಶುವಿನ ತಂದೆ-ತಾಯಿ ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ನೇತೃತ್ವದಲ್ಲಿ ಶಿಶುವಿನ ಚಿಕಿತ್ಸೆ ಮುಂದುವರೆದಿದೆ. ಶಿಶುಗುಣಮುಖವಾದ ನಂತರ ಚಿಕ್ಕಮಗಳೂರಿನ ಸರ್ಕಾರಿ ವಿಶೇಷ ದತ್ತು ಮಕ್ಕಳ ಕೇಂದ್ರಕ್ಕೆ ಬಿಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವೀರಭದ್ರಯ್ಯ ಮಾಜಿಗೌಂಡರ್ ತಿಳಿಸಿದ್ದಾರೆ.

ಸ್ಥಳಕ್ಕೆ ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಆರೋಗ್ಯ ಸಿಬ್ಬಂದಿ ಸಹ ಭೇಟಿ ನೀಡಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!