CHIKKAMAGALURU ; ಅಧಿಕಾರಿಗಳು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಿ ಕೊಡುವುದರೊಂದಿಗೆ ಉತ್ತಮ ಸೇವೆ ನೀಡಬೇಕು ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಕಡೂರು ತಾಲ್ಲೂಕು ಕಛೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಅವರು ಮಾತನಾಡಿದರು.
ಸರ್ಕಾರವು ರಾಜ್ಯದ ಜನತೆಯ ವ್ಯವಸ್ಥಿತ ಬದುಕಿಗಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಭವಿಷ್ಯ ರೂಪಿಸಿ ಕೊಡುವುದಕ್ಕಾಗಿ ಹಾಗೂ ಅವರ ಕೈ ಬಲಪಡಿಸಲು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಶ್ರಮಿಸುತ್ತಿದೆ. ಸರ್ಕಾರದ ಯಾವುದೇ ಯೋಜನೆಗಳು, ಜನರಿಗೆ ತಲುಪಬೇಕಾದರೆ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದೆ. ಅಧಿಕಾರಿಗಳು ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವಲ್ಲಿ, ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸಲು ಹೆಚ್ಚಿನ ಕ್ರಮ ವಹಿಸಬೇಕು ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಪ್ರಜೆಗಳಿಗೆ ಗುಣಮಟ್ಟದ ಜೀವನ ರೂಪಿಸಿಕೊಡುವುದು ಹಾಗೂ ಅವರ ಬೇಡಿಕೆಗಳನ್ನು ಪೂರೈಸಿ ಕೊಡುವುದಲ್ಲದೆ ಅವರ ಸ್ವಾವಲಂಬಿ ಬದುಕು ಕಟ್ಟಿಕೊಡುವ ಉದ್ದೇಶದಿಂದ ಜನರ ಸಮಸ್ಯೆಗಳಿಗೆ ಗ್ರಾಮ ಮಟ್ಟದಿಂದಲೂ ಜನ ಸಂಪರ್ಕ ಸಭೆ ನಡೆಸಿ ಪರಿಹಾರ ಒದಗಿಸಿ ಕೊಡಲಾಗುತ್ತಿದೆ. ಅಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬಗೆಹರಿಸಬಹುದಾದ ಪ್ರಕರಣಗಳನ್ನು ಗುರುತಿಸಿ ನ್ಯಾಯ ಒದಗಿಸಿಕೊಡಬೇಕು. ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ವಿಲೇವಾರಿಯಾಗುವಂತ ಪ್ರಕರಣಗಳಿದ್ದರೆ ಅವುಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲು ಕ್ರಮವಹಿಸಬೇಕು ಎಂದ ಅವರು ಸಮಸ್ಯೆಗಳನ್ನು ಹೊತ್ತು ಬರುವ ಜನ ಸಾಮಾನ್ಯರೊಂದಿಗೆ ಸಹಾನುಭೂತಿಯಿಂದ ವರ್ತಿಸಿ ಅವರಿಗೆ ಉತ್ತಮ ಸೇವೆ ಒದಗಿಸಿ ಧೈರ್ಯ ತುಂಬಿ ಭರವಸೆ ನೀಡಬೇಕು ಎಂದು ಹೇಳಿದರು.
ಕಡೂರು ವಿಧಾನ ಸಭಾಕ್ಷೇತ್ರದ ಶಾಸಕ ಕೆ.ಎಸ್. ಆನಂದ ಮಾತನಾಡಿ ಕ್ಷೇತ್ರದಲ್ಲಿ ಹೋಬಳಿ ಮಟ್ಟದ ಜನ ಸಂಪರ್ಕ ಸಭೆ ಆಯೋಜಿಸಿ ಜನರ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸಿಲಾಗಿದೆ. ಸ್ಥಳೀಯವಾಗಿ ಜನರ ಕಷ್ಟಗಳಿಗೆ ಸ್ಪಂದಿಸಲು ಜನ ಸ್ಪಂದನ ಕಾರ್ಯಕ್ರಮವು ಸಹಕಾರಿಯಾಗಿದ್ದು, ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿ ಹಾಗೂ ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಶ್ರೀ ಸಾಮಾನ್ಯರಿಗೂ ತಲುಪಿಸಿ ಉತ್ತಮ ಆಡಳಿತ ನೀಡಲು ಉಪಯುಕ್ತವಾಗಿದೆ. ಸರ್ಕಾರವು ಜನರ ಬದುಕಿನ ಸುಧಾರಣೆಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಿ ಜನರಿಗೆ ತಲುಪಿಸುವಲ್ಲಿ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ. ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ತಲುಪಿಸುವುದೆ ಈ ಜನಸಂಪರ್ಕ ಸಭೆಯ ಉದ್ದೇಶವಾಗಿದೆ, ಈ ನಿಟ್ಟಿನಲ್ಲಿ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಅವರ ಶ್ರಮ ಅಪಾರವಾಗಿದೆ. ಗ್ಯಾರಂಟಿ ಯೋಜನೆಗಳೊಂದಿಗೆ ಕ್ಷೇತ್ರದ ಹಲವಾರು ಅಭಿವೃದ್ಧಿ ಕಾರ್ಯಗಳು ಮುಂಚೂಣಿಯಲ್ಲಿವೆ ಎಂದ ಅವರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳಂತೆ ಜನ ಸಂಪರ್ಕ ಕಾರ್ಯಕ್ರಮವು ಕೂಡ ಉತ್ತಮ ಯೋಜನೆಯಾಗಿದೆ. ಈ ವರೆಗೆ ಜಿಲ್ಲೆಯಲ್ಲಿ 04 ಜನ ಸಂಪರ್ಕ ಸಭೆಗಳು ನಡೆದಿದ್ದು, ಇದು ಐದನೇ ಜನ ಸಂಪರ್ಕ ಸಭೆ ಆಗಿದೆ. ಜನ ಸಂಪರ್ಕ ಸಭೆಯಲ್ಲಿ ಜನರ ಅಹವಾಲುಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ ಪರಿಹಾರ ಒದಗಿಸಲಾಗುತ್ತಿದೆ. ಜನ ಸಂಪರ್ಕ ಸಭೆಗೆ 209 ಅರ್ಜಿಗಳು ಸ್ವೀಕೃತವಾಗಿದೆ ಎಂದ ಅವರು ಹೆಚ್ಚು ಅರ್ಜಿಗಳು ಪೋಡಿಗೆ ಸಂಬಂಧಿಸಿದಂತೆ ಬಂದಿದೆ ಎಂದ ಅವರು ಇವುಗಳ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು ಎಂದರು.
ಜನ ಸಂಪರ್ಕ ಸಭೆಯಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷರಾದ ಡಾ. ಅಂಶುಮಂತ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್. ಹರೀಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ, ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಹಾಜರಿದ್ದರು.