ಹೊಸನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳಾಗಿದ್ದು, ಜನರಿಂದ ಆಯ್ಕೆಯಾದ ಪ್ರತಿಯೊಬ್ಬ ಜನಪ್ರತಿನಿಧಿಯೂ ಜನರ ಸೇವಕನಾಗಿ ಕಾರ್ಯನಿರ್ವಹಿಸಬೇಕು. ಈ ಮೂಲ ತತ್ವವನ್ನು ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅರಿತುಕೊಂಡು ಕೆಲಸ ಮಾಡಿದಾಗ ಮಾತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗಿ ಉಳಿಯಲು ಸಾಧ್ಯ ಎಂದು ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಹುಂಚ ಹೋಬಳಿಯ ಶ್ರೀ ಪದ್ಮಾಂಬ ಪ್ರೌಢಶಾಲೆಯ ಸಭಾಭವನದಲ್ಲಿ ಕಂದಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಜಾ ಸೇವಾ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರು ತಮ್ಮ ದೈನಂದಿನ ಸಮಸ್ಯೆಗಳಾದ ಪಹಣಿ ತಿದ್ದುಪಡಿ, ಖಾತೆ ಬದಲಾವಣೆ, ಪಿಂಚಣಿ, ರೇಷನ್ ಕಾರ್ಡ್ ಹಾಗೂ ಇನ್ನಿತರ ಸರ್ಕಾರಿ ಸೌಲಭ್ಯಗಳಿಗಾಗಿ ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರವೇ ರೂಪುಗೊಂಡಿರುವ ಈ ವೇದಿಕೆಯಲ್ಲಿ ಅಧಿಕಾರಿಗಳೇ ನೇರವಾಗಿ ಗ್ರಾಮೀಣ ಭಾಗಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸುತ್ತಿದ್ದಾರೆ. ಸಾರ್ವಜನಿಕರು ಇಂತಹ ಜನಪರ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು.
ಅಧಿಕಾರಿಗಳಿಗೆ ಶಾಸಕರ ಸೂಚನೆ:
ಕಾರ್ಯಕ್ರಮದಲ್ಲಿ ಕಂದಾಯ, ಪಂಚಾಯತ್ ರಾಜ್ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 69 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸ್ಥಳದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿದ ಶಾಸಕರು, ಉಳಿದ ಅರ್ಜಿಗಳನ್ನು ಕಾಲಮಿತಿಯೊಳಗೆ ಪರಿಶೀಲಿಸಿ ಜನರಿಗೆ ನ್ಯಾಯ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗ್ರಾಮೀಣ ಜನರ ಕೆಲಸ ಕಾರ್ಯಗಳಲ್ಲಿ ಯಾವುದೇ ವಿಳಂಬ ಧೋರಣೆ ತೋರದೆ ಪ್ರಾಮಾಣಿಕವಾಗಿ ಸ್ಪಂದಿಸುವಂತೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಹೊಸನಗರ ತಹಶೀಲ್ದಾರ್ ಭರತ್‌ರಾಜ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಬಿ. ಚಿದಂಬರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಕೆಡಿಪಿ ಸದಸ್ಯ ಗುರುರಾಜ್, ಗ್ರೇಡ್-2 ತಹಶೀಲ್ದಾರ್ ಸುಧೀಂದ್ರ ಕುಮಾರ್, ಶಿರಸ್ತೇದಾರ್ ಕಟ್ಟೆ ಮಂಜುನಾಥ್, ಪ್ರಥಮ ದರ್ಜೆ ಸಹಾಯಕರಾದ ಚಿರಾಗ್, ರೇಣುಕಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕಾವೇರಿ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

