ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ತಲೆದೋರಿರುವ ಅಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ವಿದ್ಯುತ್ ಸಂಬಂಧಿತ ಹಲವು ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಆಗ್ರಹಿಸಿ, ನಾಳೆ (ಅಕ್ಟೋಬರ್ 23, ಶುಕ್ರವಾರ) ಬೆಳಗ್ಗೆ 10:30ಕ್ಕೆ ಪಟ್ಟಣದ ಮೆಸ್ಕಾಂ (MESCOM) ಕಚೇರಿ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಾಜಿ ಸಚಿವರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಕೆರೆಹಳ್ಳಿ ಹೋಬಳಿಯ ಸಮಸ್ತ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಹಕ್ಕಿಗಾಗಿ ಧ್ವನಿ ಎತ್ತುವಂತೆ ಬಿಜೆಪಿ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಜಿ.ಡಿ. ಮಲ್ಲಿಕಾರ್ಜುನ್ ಹಾಗೂ ಅರುಣ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಎನ್. ಸತೀಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎನ್. ವರ್ತೇಶ್, ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್. ಸುಂದರೇಶ್, ಪಕ್ಷದ ಪ್ರಮುಖರಾದ ಆರ್.ಟಿ. ಗೋಪಾಲ್, ತಾ.ಪಂ. ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಜಿ.ಪಂ. ಮಾಜಿ ಸದಸ್ಯೆ ಎ.ಟಿ. ನಾಗರತ್ನಮ್ಮ, ಬಿಜೆಪಿ ತಾಲ್ಲೂಕು ಉಪಾಧ್ಯಕ್ಷರುಗಳಾದ ಮೆಣಸೆ ಆನಂದ್, ಮಂಜುಳಾ ಕೇತಾರ್ಜಿರಾವ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ನಾಗಾರ್ಜುನ ಸ್ವಾಮಿ, ರಾಘವೇಂದ್ರ ಕಲ್ಲುಕೊಪ್ಪ ಸೇರಿದಂತೆ ಉಭಯ ಪಕ್ಷಗಳ ಪ್ರಮುಖರು, ಕಾರ್ಯಕರ್ತರು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

