ಬಾಳೆಹೊನ್ನೂರು ; ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟೀಯ ಅಧ್ಯಕ್ಷ, ಮಾಜಿ ಸಚಿವ, ಹಿರಿಯ ರಾಜಕೀಯ ಧುರೀಣ ಡಾ. ಶಾಮನೂರು ಶಿವಶಂಕರಪ್ಪನವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ.ಶಾಮನೂರು ಶಿವಶಂಕರಪ್ಪನವರು ಬಾಪೂಜಿ ವಿದ್ಯಾ ಸಂಸ್ಥೆ ಕಾರ್ಯದರ್ಶಿಗಳಾಗಿ ಧಾರ್ಮಿಕವಾಗಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಮೂಲ್ಯವಾದಂತ ಸೇವೆ ಸಲ್ಲಿಸಿದ್ದನ್ನು ಮರೆಯಲಾಗದು. ದೈವಭಕ್ತರಾದ ಶ್ರೀಯುತರು ಎಲ್ಲಾ ಧರ್ಮ ಬಾಂಧವರೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿದ್ದರು. ಅವರಿಗೆ ಶ್ರೀ ಜಗದ್ಗುರು ರಂಭಾಪುರಿ ಪೀಠದಿಂದ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಯನ್ನು ಶ್ರೀ ಜಗದ್ಗುರು ಪಂಚಪೀಠಾಧೀಶರಿಂದ ವೀರಶೈವ ರತ್ನ ವಿಶೇಷ ಪ್ರಶಸ್ತಿ ನೀಡಲಾಗಿದ್ದನ್ನು ಸ್ಮರಿಸಿರುವ ಶ್ರೀ ರಂಭಾಪುರಿ ಜಗದ್ಗುರುಗಳು ಶಾಮನೂರು ಶಿವಶಂಕರಪ್ಪನವರು ಗಟ್ಟಿ ನಿಲುವಿನ ವ್ಯಕ್ತಿತ್ವ ಹೊಂದಿದ್ದರು. ಈ ಹಿಂದೆ ವೀರಶೈವ ಲಿಂಗಾಯತ ಬೇರೆ ಬೇರೆ ಎಂಬ ಕೂಗು ಎದ್ದಾಗ ಅವರು ವೀರಶೈವ ಲಿಂಗಾಯತ ಒಂದೇ ಎಂಬ ದಿಟ್ಟ ಹೇಳಿಕೆ ನೀಡಿದ್ದನ್ನು ಮರೆಯುವಂತಿಲ್ಲ. ವೀರಶೈವ ಲಿಂಗಾಯತ ಸಮಾಜದ ಸಂಘಟನೆಗಾಗಿ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದರು.
ಇತ್ತೀಚೆಗೆ ದಾವಣಗೆರೆಯಲ್ಲಿ ಜರುಗಿದ ಶ್ರೀ ಜಗದ್ಗುರು ಪಂಚಪೀಠಾಧೀಶರ ಮತ್ತು ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಅವರು ಪಾಲ್ಗೊಂಡಿದ್ದಲ್ಲದೇ ಪಂಚ ಪೀಠಾಧೀಶರನ್ನು ಮನೆಗೆ ಕರೆಯಿಸಿ ಪಾದ ಪೂಜೆ ನೆರವೇರಿಸಿದ್ದು ತಮ್ಮ ಮನದಲ್ಲಿ ಇನ್ನೂ ಹಸಿರಾಗಿದೆ.

ಅಗಲಿದ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





