ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತರನ್ನು ಮಡಸೂರು ಗ್ರಾಮದ ಆನಂದ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಅವರು ಕೃಷಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಅಡಿಕೆ ತೋಟಗಳಲ್ಲಿ ಔಷಧಿ ಸಿಂಪಡಿಸುವುದು ಸೇರಿದಂತೆ ಕೃಷಿ ಸಂಬಂಧಿತ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.
ಮಾಹಿತಿ ಪ್ರಕಾರ, ಆನಂದ್ ಪೂಜಾರಿ ಅವರು ರಾತ್ರಿ ವೋಟರ್ ಐಡಿ ಜೆರಾಕ್ಸ್ ಪ್ರತಿಯನ್ನು ತರಲು ಹೋಗಿ ಬರುತ್ತೇನೆ ಎಂದು ಮನೆಯಿಂದ ಬೈಕ್‌ನಲ್ಲಿ ಹೊರಟಿದ್ದರು. ಆದರೆ ತಡರಾತ್ರಿಯಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ಆರಂಭಿಸಿದರು.
ಲೇಖನವನ್ನು ಮುಂದುವರಿಸಿ ಓದಿ
ಕುಟುಂಬಸ್ಥರು ಕರೆ ಮಾಡಿದರೂ ಅವರು ಕರೆ ಸ್ವೀಕರಿಸದ ಕಾರಣ ಅನುಮಾನ ಹೆಚ್ಚಾಗಿದೆ. ಬಳಿಕ ಮನೆಯಿನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಅವರ ಬೈಕ್ ಪತ್ತೆಯಾಗಿದೆ. ಅದೇ ಪ್ರದೇಶದ ಸಮೀಪ ಆನಂದ್ ಪೂಜಾರಿ ಅವರ ಮೃತದೇಹವೂ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮೇಲ್ನೋಟಕ್ಕೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೆ ಕಾರಣವೇನು, ಘಟನೆಯಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಿಂದ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಆನಂದ್ ಪೂಜಾರಿ ಅವರ ಸಾವಿನಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದು, ಮಡಸೂರು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

