ಸಾಗರ: ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಪ್ರಕರಣದಲ್ಲಿ 17 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸಾಗರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯಶಸ್ವಿ ಎಂದು ಗುರುತಿಸಲಾಗಿದೆ. ಕಿರುಕುಳ ಮತ್ತು ಬೆದರಿಕೆಯಿಂದ ಮನನೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ಆರೋಪಿ ಸುಮುಖ ಅಡ್ಡೇರಿ ಎಂಬಾತ ಕಳೆದ ಒಂದೂವರೆ ವರ್ಷಗಳಿಂದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿಂದೆ ಮೊಬೈಲ್ ಫೋನ್ ಮೂಲಕ ಸಂಪರ್ಕದಲ್ಲಿದ್ದ ವಿಚಾರ ತಿಳಿದ ಬಳಿಕ ಪೋಷಕರು ಎಚ್ಚರಿಕೆ ನೀಡಿದ್ದರೂ, ಆತನ ವರ್ತನೆ ಮುಂದುವರಿದಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಲೇಖನವನ್ನು ಮುಂದುವರಿಸಿ ಓದಿ
ಕಾಲೇಜು ಮತ್ತು ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಬೈಕ್‌ನಲ್ಲಿ ಹಿಂಬಾಲಿಸುವುದು, ಚುಡಾಯಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ ಎಂಬ ಆರೋಪವಿದೆ. ಇತ್ತೀಚೆಗೆ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಮುಂದಿಟ್ಟುಕೊಂಡು ಬೆದರಿಕೆ ಹಾಕಿದ್ದಾನೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
ಆರೋಪಿಯ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡ ಬಳಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ನಂತರ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ, ಆರೋಪಿ ಸುಮುಖನಿಂದ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್ ಆಗುತ್ತಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದು, ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿನಿಯ ತಂದೆ ವಿಶ್ವನಾಥ್ ಹೆಚ್. ಅವರ ದೂರಿನ ಮೇರೆಗೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಕುಟುಂಬಸ್ಥರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪೋಕ್ಸೋ ಕಾಯ್ದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳಡಿ ತನಿಖೆ ನಡೆಸಿ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿ ಪಡೆದರು. ಸಾಗರ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆಗೆ ಪೊಲೀಸ್ ಗಸ್ತು ಹೆಚ್ಚಿಸಬೇಕು ಎಂಬ ಸಾರ್ವಜನಿಕ ಬೇಡಿಕೆಯೂ ವ್ಯಕ್ತವಾಗಿದೆ.

