ಸಾಗರ: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆ ಖಂಡಿಸಿ ಸಾಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಬಿಜೆಪಿ ಮತ್ತು ಸಂಘ ಪರಿವಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ರಾಷ್ಟ್ರಪತಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್. ಜಯಂತ್, ಬಿಜೆಪಿ ಹಾಗೂ ಅದರ ಅಂಗ ಸಂಸ್ಥೆಗಳಿಗೆ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೇಲೆ ಗೌರವವಿಲ್ಲ ಎಂದು ಆರೋಪಿಸಿದರು. ಇಂತಹ ಘಟನೆಗಳು ದಲಿತ ಸಮುದಾಯದ ವಿರುದ್ಧದ ತಾರತಮ್ಯವನ್ನು ತೋರಿಸುತ್ತವೆ ಎಂದು ಅವರು ಹೇಳಿದರು.
ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನದ ಗೌರವ ಕಾಪಾಡಲು ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದು ಜಯಂತ್ ಹೇಳಿದರು.
ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಅಧ್ಯಕ್ಷ ಎಲ್. ಚಂದ್ರಪ್ಪ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು.
ನಗರಸಭೆ ಮಾಜಿ ಅಧ್ಯಕ್ಷೆ ಎನ್. ಲಲಿತಮ್ಮ ಮಾತನಾಡಿ, ಇದು ಕೇವಲ ಖರ್ಗೆ ಅವರಿಗೆ ಮಾಡಿದ ಅವಮಾನವಲ್ಲ. ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಆತ್ಮಗೌರವಕ್ಕೆ ಧಕ್ಕೆ ತಂದಿರುವ ಘಟನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಗ್ರಾಮಾಂತರ ಮಂಡಳಿ ಅಧ್ಯಕ್ಷೆ ಪ್ರಭಾವತಿ, ಮುಖಂಡರಾದ ಕಲಸೆ ಚಂದ್ರಪ್ಪ, ಸುರೇಶ್‌ಬಾಬು, ಜ್ಯೋತಿ ಕೋವಿ, ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಸದಾಂ ಡೊಡ್ಡಮನೆ, ವಿಲ್ಸನ್ ಗೋನ್ಸಾಲ್ವಿಸ್, ರೇಖಾ, ಮಂಜುಳಾ ಚಂದ್ರಪ್ಪ, ದಿನೇಶ್ ಡಿ., ಮಹಾಬಲ ಕೌತಿ, ಆನಂದ್ ಭೀಮನೇರಿ, ಗಿರೀಶ್ ಕೋವಿ, ಅನ್ವರ್ ಭಾಷಾ, ನಾಗರಾಜ ಗುಡ್ಡೆಮನೆ, ಕೆ. ಹೊಳೆಯಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

