ಸಾಗರ: ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ಕಾಸಬಡಿ ಗ್ರಾಮದ ಸಮೀಪ ನಡೆದಿದೆ.
ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ‘ಕೃಷ್ಣ’ ಹೆಸರಿನ ಖಾಸಗಿ ಬಸ್, ಕಾಸ್ಪಾಡಿ ಸಮೀಪದ ಕೆರೆಯ ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿದೆ. ಪರಿಣಾಮ ಬಸ್ ರಸ್ತೆ ಬಿಟ್ಟು ಕೆರೆ ಪಕ್ಕದಲ್ಲಿ ಹಾಕಲಾಗಿದ್ದ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದು ನಿಂತಿದೆ.
ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಬಸ್ ಕೆರೆಗೆ ಉರುಳದೆ ಬೇಲಿಗೆ ಸಿಲುಕಿಕೊಂಡಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
ಅಪಘಾತದ ಸಂದರ್ಭದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾದರು. ಆದರೆ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಮತ್ತು ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ಸಿಗುತ್ತಿದ್ದಂತೆ ಆನಂದಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

