ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳ ಸೇವಾ ಅವಧಿಯನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಅವರ ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ ವಿವಿಧ ಜನಸೇವಾ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಹಾಗೂ ಮಹಾತ್ಮ ಗಾಂಧಿ ಜಯಂತಿಯನ್ನೂ ಈ ಅಭಿಯಾನದ ಭಾಗವಾಗಿ ಆಚರಿಸಲಾಗುತ್ತದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಸೂಚನೆಯಂತೆ ದೇಶದಾದ್ಯಂತ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರು ಬಳಿಕ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಆಡಳಿತಾವಧಿಯಲ್ಲಿ ಬಡವರ ಕಲ್ಯಾಣ, ಉಚಿತ ಪಡಿತರ, ವಸತಿ, ಶೌಚಾಲಯ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ರಾಘವೇಂದ್ರ ವಿವರಿಸಿದರು.
ಪ್ರಧಾನಿ ಮೋದಿ ಅವರ ಆಡಳಿತದಲ್ಲಿ 25 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರಬಂದಿದ್ದಾರೆ, ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ ಹಾಗೂ ಕೋಟ್ಯಂತರ ಕುಟುಂಬಗಳಿಗೆ ವಸತಿ ಮತ್ತು ಶೌಚಾಲಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿಯೂ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಸದರು ತಿಳಿಸಿದರು.
ಸೆಪ್ಟೆಂಬರ್ 17ರಂದು ಪ್ರಧಾನಿ ಮೋದಿ ಅವರ ಜನ್ಮದಿನದ ಪ್ರಯುಕ್ತ ಕ್ಷೇತ್ರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ಸಂಜೆ ಕಾರ್ಯಕರ್ತರು ಹಾಗೂ ನಾಗರಿಕರು ತಮ್ಮ ಮನೆಗಳ ಮುಂದೆ ‘ಆಶೀರ್ವಾದದ ದೀಪ’ ಬೆಳಗಿಸಿ, ಅದರ ಚಿತ್ರಗಳನ್ನು #AashirwadForModi ಹ್ಯಾಶ್‌ಟ್ಯಾಗ್‌ನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಕರೆ ನೀಡಲಾಗಿದೆ.
ಸೆಪ್ಟೆಂಬರ್ 18ರಿಂದ 24ರವರೆಗೆ ‘ನಮೋ ಸೇವಾ ಗಾಥಾ’ ಕಾರ್ಯಕ್ರಮದಡಿ ಮಹಿಳಾ ಮೋರ್ಚಾದಿಂದ ಸ್ವಚ್ಛತಾ ಅಭಿಯಾನ, ಎಸ್‌ಸಿ–ಎಸ್‌ಟಿ ಮೋರ್ಚಾದಿಂದ ರಕ್ತದಾನ ಶಿಬಿರ, ರೈತ ಹಾಗೂ ಒಬಿಸಿ ಮೋರ್ಚಾದಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ನಾಗರಿಕ ಸೇವಾ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತದೆ. ಯುವಮೋರ್ಚಾದಿಂದ ಸೈಕಲ್ ಜಾಥಾ ಹಾಗೂ ಸಾಂಸ್ಕೃತಿಕ ಪ್ರಕೋಷ್ಠದಿಂದ ಬೀದಿ ನಾಟಕ ಪ್ರದರ್ಶನ ನಡೆಯಲಿದೆ.
ಸೆಪ್ಟೆಂಬರ್ 25ರಂದು ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಜಯಂತಿ ಹಾಗೂ ಅಂತ್ಯೋದಯ ಉಪನ್ಯಾಸ ಆಯೋಜಿಸಲಾಗುತ್ತದೆ. ಸೆಪ್ಟೆಂಬರ್ 27ರಂದು ಬೂತ್ ಮಟ್ಟದಲ್ಲಿ ‘ಮನ್ ಕೀ ಬಾತ್’ ವೀಕ್ಷಣೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ ಹಾಗೂ ಉಚಿತ ಉಪಕರಣ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಅಂಗವಾಗಿ ಖಾದಿ ಪ್ರದರ್ಶನ ಮತ್ತು ‘ಸ್ವದೇಶಿ ಸಂತೆ’ ನಡೆಸಲಾಗುತ್ತದೆ. ಅಕ್ಟೋಬರ್ 7ರಿಂದ 14ರವರೆಗೆ ಶಾಲಾ ಮಕ್ಕಳಿಗಾಗಿ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ಅಕ್ಟೋಬರ್ 17ರಂದು ಬೃಹತ್ ಮಾನವ ರಂಗೋಲಿ ಹಾಗೂ ‘ಸೇವಾ ಜ್ಯೋತಿ’ ಬೆಳಗಿಸುವ ಕಾರ್ಯಕ್ರಮದೊಂದಿಗೆ ಒಂದು ತಿಂಗಳ ಅಭಿಯಾನಕ್ಕೆ ಸಮಾರೋಪ ನಡೆಯಲಿದೆ ಎಂದು ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಕ್ಷೇತ್ರದ ನಾಗರಿಕರು, ಯುವಜನರು ಹಾಗೂ ಮಹಿಳೆಯರು ರಕ್ತದಾನ, ಸ್ವಚ್ಛತಾ ಕಾರ್ಯಕ್ರಮ, ದೀಪ ಬೆಳಗಿಸುವಿಕೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.

