ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನ ಮಾಲೀಕನಿಗೆ ₹27,000 ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ.
2025ರಲ್ಲಿ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ್ದ ಹಿನ್ನೆಲೆಯಲ್ಲಿ ವಾಹನ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ತನಿಖೆ ಪೂರ್ಣಗೊಳಿಸಿದ ನಂತರ ಪೊಲೀಸರು ಶಿವಮೊಗ್ಗದ 1ನೇ ಎ.ಸಿ.ಜೆ. ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಾಹನ ಮಾಲೀಕನಿಗೆ ₹27,000 ದಂಡ ವಿಧಿಸಿ ಆದೇಶಿಸಿದೆ.
ಮಕ್ಕಳ ಕೈಗೆ ವಾಹನ ನೀಡುವ ಪೋಷಕರು ಹಾಗೂ ವಾಹನ ಮಾಲೀಕರಿಗೆ ಈ ತೀರ್ಪು ಎಚ್ಚರಿಕೆಯ ಸಂದೇಶವಾಗಿದೆ. ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳಲ್ಲಿ ಮಾಲೀಕರ ಮೇಲೆಯೂ ಕಾನೂನು ಕ್ರಮ ಜರುಗಬಹುದು ಎಂಬುದನ್ನು ಈ ತೀರ್ಪು ಸ್ಪಷ್ಟಪಡಿಸಿದೆ.

