ಶಿವಮೊಗ್ಗ: ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಬಂಧನ ವೇಳೆ ಪೊಲೀಸರ ಫೈರಿಂಗ್ ನಡೆದಿದೆ.
ಶಿವಮೊಗ್ಗ ತಾಲೂಕಿನ ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ರಾತ್ರಿ ಈ ಘಟನೆ ನಡೆದಿದೆ. ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಉಮೇಶ್ ನಾಯ್ಕ್‌ನನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಎನ್ನಲಾಗಿದೆ.
ಬಂಧನದ ವೇಳೆ ಶರಣಾಗುವಂತೆ ಪೊಲೀಸರು ಎಚ್ಚರಿಕೆ ನೀಡಿದರೂ, ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರ ಮೇಲೆ ದಾಳಿ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಆತ್ಮರಕ್ಷಣೆಯ ದೃಷ್ಟಿಯಿಂದ ತುಂಗಾನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರುರಾಜ್ ಅವರು ಆರೋಪಿ ಉಮೇಶ್ ನಾಯ್ಕ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.
ಗುಂಡೇಟಿನಿಂದ ಗಾಯಗೊಂಡ ಉಮೇಶ್ ನಾಯ್ಕ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ದಾಳಿಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರಿಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಈ ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ

