ಗ್ಯಾರಂಟಿ ಯೋಜನೆ ಜಾರಿಗೊಳಿಸುವುದರಲ್ಲಿ ನಮ್ಮದೇನು ತಕರಾರಿಲ್ಲ ಆದರೆ ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಹೆಚ್ಚಿನ ಪ್ರಾಮುಖ್ಯತೆ ನೀಡಿ ; ಎಂಎಲ್‌ಸಿ ಭೋಜೇಗೌಡ

0 35


ಹೊಸನಗರ: ರಾಜ್ಯದ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿ ಮಾಡುವುದರಲ್ಲಿ ನಮ್ಮದೇನು ಅಭ್ಯಂತರವಿಲ್ಲ ಆದರೆ ಗ್ಯಾರಂಟಿ ಯೋಜನೆಯ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಆರೋಗ್ಯ ಇಲಾಖೆಗೆ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಕೊಡುವುದನ್ನು ಮರೆಯಬಾರದು ಎಂದು ಎಂಎಲ್‌ಸಿ ಭೋಜೇಗೌಡ ಹೇಳಿದರು.

ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಪತ್ರಿಕಾ ಘೋಷ್ಠಿ ನಡೆಸಿ ಮಾತನಾಡಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಸಿಂಧುತ್ವ ಮಾಡಿಸುತ್ತಿರುವುದು ಅವೈಜ್ಞಾನಿಕವಾಗಿದ್ದು ಇದು ನೇಮಕಾತಿ ವಿಳಂಬಕ್ಕೆ ಮುಖ್ಯ ಕಾರಣವಾಗಿದೆ. ಜೊತೆಗೆ ಕೆ.ಎ.ಟಿ. ಕೂಡ ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಾತಿ ಮತ್ತು ಆದಾಯ ಸಿಂದುತ್ವ ಅಗತ್ಯವಿಲ್ಲ ಎಂದು ತೀರ್ಪು ನೀಡಿದ್ದಾರೆ. ಆದರೂ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು.


ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ಶಿಕ್ಷಕರ ಕೊರತೆಯನ್ನು ನೀಗಿಸಲು ಆಯ್ಕೆಯಾಗಿರುವ 13,351 ಶಿಕ್ಷಕರ ನೇಮಕಾತಿಯನ್ನು ಬೇಗ ಪೂರ್ಣಗೊಳಿಸಬೇಕು. ಸರ್ಕಾರದ ವಕೀಲರೊಂದಿಗೆ ಚರ್ಚಿಸಿ ಕೇಸ್ ಗಳನ್ನು ಇತ್ಯರ್ಥ ಪಡಿಸಿ ಶೀಘ್ರವಾಗಿ ಆಯ್ಕೆಯಾದ 13,351 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.


2022ರಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ 15,000 ಶಿಕ್ಷಕರನ್ನು ನೇಮಿಸಿಕೊಳ್ಳುವ ತಂತ್ರ ನಡೆದಿತ್ತು. ಆದರೆ ಕೆಲವರು ಕೋರ್ಟ್ ಮೊರೆ ಹೋಗಿದ್ದರಿಂದ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಾತಿಗೆ ಬ್ರೇಕ್ ಬಿದ್ದಿದ್ದು ಆದರೆ ಅಲಿಂದ ಇಲ್ಲಿಯವರೆಗೆ ಶಿಕ್ಷಕರ ನೇಮಕಾತಿಯಾಗಿಲ್ಲ‌. ತಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳದಿದ್ದರೆ ಮುಂದಿನ ದಿನದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಶಿಕ್ಷಣದ ಗುಣಮಟ್ಟ ಕಳಪೆಯಾಗುತ್ತದೆ ಮತ್ತು ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಾರೆ. ಇದರಿಂದ ಶಿಕ್ಷಣ ಕ್ಷೇತ್ರ ಸಂಪೂರ್ಣ ನೆಲಕಚ್ಚುತ್ತದೆ. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಪ್ರಗತಿಯಲ್ಲಿರುವ ಶಿಕ್ಷಕರ ನೇಮಕಾತಿಯನ್ನು ಪೂರ್ಣಗೊಳ್ಳಿಸಿ ಮತ್ತೆ ಖಾಲಿ ಉಳಿವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಬೇಕೆಂದು ಶಿಕ್ಷಣ ಸಚಿವರಿಗೆ ಆಗ್ರಹಿಸಿದರು.

Leave A Reply

Your email address will not be published.

error: Content is protected !!