ಹೊಸನಗರ : ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಆಸ್ಪತ್ರೆ ಕಟ್ಟಡ ಏರಿ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಘಟನೆ ತಾಲೂಕಿನಲ್ಲಿ ನಡೆದಿದೆ.
ಮೂಡುಗೊಪ್ಪ (ನಗರ) ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟನೆ ನಡೆಸಿದ ಗ್ರಾಪಂ ಅಧ್ಯಕ್ಷ. ಹೋಬಳಿ ಕೇಂದ್ರವಾಗಿರುವ ನಗರದ ಸರ್ಕಾರಿ ಸಂಯುಕ್ತ ಆಸ್ಪತ್ರೆಯಲ್ಲಿ ಖಾಯಂ ವೈದ್ಯರನ್ನು ನೇಮಕ ಮಾಡಿಲ್ಲ ಎಂದು ಆರೋಪಿಸಿದರು.
ಮಂಗಳವಾರ ಬೆಳಿಗ್ಗೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ಸರ್ಕಾರಿ ಆಸ್ಪತ್ರೆಯ ಕಟ್ಟಡ ಏರಿದ ಕರುಣಾಕರ ಶೆಟ್ಟಿ, ಖಾಯಂ ವೈದ್ಯರ ನೇಮಕವಾಗುವವರೆಗೂ ಕೆಳಗಿಳಿಯುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಬಳಿಕ ತಾಲೂಕು ವೈದ್ಯಾಧಿಕಾರಿ ಭೇಟಿ ನೀಡಿ ಮನವೊಲಿಸಿದ ನಂತರ ಪ್ರತಿಭಟನೆ ಕೈ ಬಿಟ್ಟಿದ್ದಾರೆ.