ಹೊಸನಗರ: ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಹರತಾಳು ಗ್ರಾಮ ಪಂಚಾಯತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದ ವಕೀಲ ಹೆಚ್.ಪಿ.ನಂಜುಂಡಪ್ಪನವರು ತಮ್ಮ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಬಿಜೆಪಿಯ ಹೊಸನಗರ-ಸಾಗರ ಕ್ಷೇತ್ರದ ಅಭ್ಯರ್ಥಿ ಹರತಾಳು ಹಾಲಪ್ಪನವರಿಗೆ ಈ ಬಾರಿಯ ಚುನಾವಣೆಯಲ್ಲಿ ಬೆಂಬಲ ಸೂಚಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಸುದ್ಧಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ನಡೆಸುವುದರ ಜೊತೆಗೆ ನಮ್ಮನ್ನೂ ಗೌರವಿತವಾಗಿ ನಡೆದುಕೊಳ್ಳುತ್ತಿಲ್ಲ ಅದು ಅಲ್ಲದೇ ನಮ್ಮ ಗ್ರಾಮದವರೇ ಆದ ಹರತಾಳು ಹಾಲಪ್ಪನವರು ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿರುವುದರಿಂದ ಅವರ ಬೆಂಬಲಕ್ಕೆ ನಿಲ್ಲಬೇಕಾಗಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದರು.
ಇವರು ವೀರಶೈವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ರಾಜೀನಾಮೆಯಿಂದ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಹೇಳಲಾಗಿದೆ.