ರಿಪ್ಪನ್‌ಪೇಟೆ : ವಾರದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ (62) ಮೃತಪಟ್ಟ ವ್ಯಕ್ತಿಯಾಗಿದ್ದು, ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲ್ಲಾ ಕಡೆ ಹುಡುಕಾಡಿದ್ದಾರೆ. ಪತ್ತೆಯಾಗದ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು.
ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.
ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.