ರಿಪ್ಪನ್‌ಪೇಟೆ ಗ್ರಾ.ಪಂ. ಅಧ್ಯಕ್ಷರಾಗಿ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರ್ ಆಯ್ಕೆ

0 45

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿಯಾಗಿರುವ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಧನಲಕ್ಷ್ಮಿ ಅಧ್ಯಕ್ಷರಾಗಿ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಧೀಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 21 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ ಅಧ್ಯಕ್ಷ ಸ್ಥಾನ ಮಹಿಳಾ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿತ್ತು.
ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಧನಲಕ್ಷ್ಮಿ ಹಾಗೂ ಆಸಿಫ್ ಭಾಷಾ ಸಾಬ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ದೀಪ ಹಾಗೂ ಸುಧೀಂದ್ರ ಪೂಜಾರಿ ಸ್ಪರ್ಧಿಸಿದ್ದರು.
ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿ ಚುನಾವಣಾಧಿಕಾರಿಯಾಗಿ ಮಲ್ಲಿಕಾರ್ಜುನ್ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎನ್ ಮಧುಸೂದನ್ ಸಹಕರಿಸಿದರು.

ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ನೂತನ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಮಾತನಾಡಿ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಮೊದಲು ಆದ್ಯತೆ ನೀಡುತ್ತೇನೆ. ನನಗೆ ಅಧ್ಯಕ್ಷ ಸ್ಥಾನ ಲಭಿಸಲು ಕಾರಣೀಕರ್ತರಾದ ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಗ್ರಾಪಂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಹೊಸನಗರ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್, ಫ್ಯಾನ್ಸಿ ರಮೇಶ್, ರವೀಂದ್ರ ಕೆರೆಹಳ್ಳಿ,ಉಲ್ಲಾಸ್, ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಬೆದುಲ್ಲ ಶರೀಫ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!