ಬರ ಎದುರಿಸಲು ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ ; ಮಧು ಬಂಗಾರಪ್ಪ

0 238

ಶಿವಮೊಗ್ಗ: ಪ್ರಸಕ್ತ ಬೇಸಿಗೆಯಲ್ಲಿ (Summer) ಶಿವಮೊಗ್ಗ (Shivamogga) ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ (Drinking water) ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಹುದಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ (Madhu Bangarappa) ಅವರು ಹೇಳಿದರು.

ಅವರು ಇಂದು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಮೇವು ಸರಬರಾಜಿನ ಕುರಿತು ಗಮನಹರಿಸುವಂತೆ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಮೌಖಿಕ ಸೂಚನೆ ನೀಡಿದ್ದಾರೆ. ಅದರಂತೆ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಬಹುದಾದ ಕ್ರಮಗಳು ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಎದುರಿಸಬಹುದಾದ ಸುಮಾರು 238ಗ್ರಾಮಗಳನ್ನು ಗುರುತಿಸಲಾಗಿದ್ದು, ನಿರೀಕ್ಷೆಯಂತೆ ಸಂಭಾವ್ಯ ಸಮಸ್ಯೆಯನ್ನು ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಸೊರಬ ಪಟ್ಟಣ ಮತ್ತು ಆನವಟ್ಟಿಗಳಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದ ಅವರು, ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ 6.42ಲಕ್ಷ ಟನ್ ಮೇವು ದಾಸ್ತಾನಿದ್ದು, ಮೇವಿನ ಕೊರತೆ ಇಲ್ಲ. ಜಿಲ್ಲೆಯಲ್ಲಿ ಮಳೆಯ ಕೊರತೆ ಹಿನ್ನೆಲೆಯಲ್ಲಿ ಆಗಿರಬಹುದಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಹಾನಿಗಳ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿಯನ್ನಾಧರಿಸಿ ಬೆಳೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಬರ ಸಮಸ್ಯೆಗೆ ಪರಿಹಾರಧನವನ್ನು ಬಿಡುಗಡೆಗೊಳಿಸಲು ಕೇಂದ್ರಕ್ಕೆ ಮನವಿ ಮಾಡಿಕೊಳ್ಳಲಾಗಿದ್ದು, ಅನುದಾನವನ್ನು ನಿರೀಕ್ಷಿಸಲಾಗುತ್ತಿದೆ ಎಂದರು.

ಜಿಲ್ಲೆಯ ನಗರ ಪ್ರದೇಶಗಳಲ್ಲಿ ನಿರಂತರವಾಗಿ ವಿದ್ಯುತ್ ಹರಿಸಲಾಗುತ್ತಿದೆ. ಅಲ್ಲದೇ ಗ್ರಾಮೀಣ ಕೃಷಿ ಚಟುವಟಿಕೆಗಳಿಗೆ ಅಡಚಣೆಯಾಗದಂತೆ ನಿರಂತರವಾಗಿ 5ಗಂಟೆಗಳ ಕಾಲ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ವಿದ್ಯಾರ್ಥಿಗಳ ಓದಿನ ಚಟುವಟಿಕೆಗೆ ಅಡಚಣೆಯಾಗದಂತೆ ವಿದ್ಯುತ್ ಒದಗಿಸಲು ಕ್ರಮವಹಿಸಲಾಗಿದೆ ಎಂದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ಜಿಲ್ಲೆಯಲ್ಲಿ ಲಕ್ಷಾಂತರ ಸಂಖ್ಯೆಯ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳುತ್ತಿರುವುದು ಹರ್ಷದ ಸಂಗತಿಯೆನಿಸಿದೆ. ಗೃಹಜ್ಯೋತಿ ಯೋಜನೆಯಡಿ ಸುಮಾರು 5,31,000 ಮಂದಿಯಲ್ಲಿ 4,63,000 ಮಂದಿ ಈ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಈ ಎಲ್ಲಾ ಕುಟುಂಬಗಳ ವಿದ್ಯುತ್ ಶುಲ್ಕವನ್ನು ಸರ್ಕಾರವೇ ಭರಿಸಿದೆ ಎಂದವರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಕೆಲವು ತಾಂತ್ರಿಕ ಕಾರಣಗಳು ಹಾಗೂ ಅರ್ಜಿಗಳ ಮಾಹಿತಿ ಅಪೂರ್ಣವಾಗಿರುವ ಕಾರಣದಿಂದಾಗಿ ಕೆಲವರಿಗೆ ಸೌಲಭ್ಯ ದೊರೆಯುವಲ್ಲಿ ವಿಳಂಬವಾಗಿದೆ. ಅರ್ಹರಾದ ಎಲ್ಲರಿಗೂ ಸೌಲಭ್ಯವನ್ನು ವಿತರಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಶಕ್ತಿ ಯೋಜನೆಯಡಿ ಕಳೆದ ಆರು ತಿಂಗಳ ಅವಧಿಯಲ್ಲಿ ಸುಮಾರು 100ಕೋಟಿಗೂ ಅಧಿಕ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ ಎಂದ ಅವರು, ನಗರದ ಮೇಲ್ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕ ಮೃತಪಟ್ಟ ವಿಷಯ ಅತ್ಯಂತ ನೋವಿನ ಸಂಗತಿ. ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಮೃತ ವ್ಯಕ್ತಿಯ ಕುಟುಂಬಕ್ಕೆ ಸಾಂತ್ವನ ಹೇಳುವ ಹಾಗೂ ಪರಿಹಾರ ಒದಗಿಸುವ ಬಗ್ಗೆಯೂ ಕ್ರಮ ವಹಿಸಲಾಗುವುದು ಎಂದರು.

ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ದೈಹಿಕ ಶಿಕ್ಷಣ ಹಾಗೂ ಸಂಗೀತ ಸೇರಿದಂತೆ ಎಲ್ಲಾ ವಿಭಾಗಗಳ ಶಿಕ್ಷಕರ ನೇಮಕಾತಿಗೂ ಗಮನಹರಿಸಲಾಗುವುದು. ಈ ವಿಷಯಕ್ಕೆ‌ ಸಂಬಂಧಿಸಿದಂತೆ ಮುಂದಿನ ಬಜೆಟ್‌ನಲ್ಲಿ ಹಣ ಕಾಯ್ದಿರಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗುವುದು. ಪ್ರಸ್ತುತ 8530 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿಗಳ ಈಗಾಗಲೇ ಘೋಷಿಸಿದಂತೆ ಸರ್ಕಾರಿ ಶಾಲೆಗಳ ವಿದ್ಯುತ್ ಮತ್ತು ನೀರಿನ ಶುಲ್ಕ ವಿನಾಯಿತಿ ಮಾಡಲಾಗಿದೆ ಎಂದರು.


ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಕೊಳೆರೋಗ, ಎಲೆಚುಕ್ಕೆ ರೋಗದ ನಿಯಂತ್ರಣಕ್ಕೆ ಕೃಷಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ತುರ್ತು ಅಗತ್ಯವಿದ್ದು, ವಿಶೇಷ ಗಮನಹರಿಸಲಾಗುವುದು ಎಂದರು.

Leave A Reply

Your email address will not be published.

error: Content is protected !!