ಶಿವಮೊಗ್ಗ : ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ತಿಂಗಳು 27ರಂದು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಮೊದಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡುವ ಬಗ್ಗೆ ಚರ್ಚೆ ನಡೆದಿತ್ತು. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲೂ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಸ್ವತಃ ಯಡಿಯೂರಪ್ಪ ಅವರೇ ತಮ್ಮ ಹೆಸರು ಇಡಲು ನಿರಾಕರಿಸಿದ್ದಲ್ಲದೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಲಹೆ ನೀಡಿದ್ದರು. ಅವರ ಈ ಸಲಹೆಯನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ಅನೇಕರು ಸ್ವಾಗತಿಸಿ ಮೆಚ್ಚುಗೆ ಸೂಚಿಸಿದ್ದರು. ಇದೀಗ ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲು ನಿರ್ಧರಿಸಲಾಗಿದೆ.
ಇದೇ ವೇಳೆ, ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕನ ಹೆಸರು ಇರಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.