ಸಂವಿಧಾನದ ಕುರಿತು ಅರಿವು ಹೊಂದಬೇಕು ; ತಹಶೀಲ್ದಾರ್ ಹುಸೇನ್ ಸರಕಾವಸ್

0 72

ಸೊರಬ: ಜಗತ್ತಿನಲ್ಲಿಯೇ ಶ್ರೇಷ್ಟವಾದ ಭಾರತ ಸಂವಿಧಾನವನ್ನು ಪ್ರತಿಯೊಬ್ಬರು ಓದುವ ಜೊತೆಗೆ ಸಂವಿಧಾನದ ಕುರಿತು ಅರಿವನ್ನು ಹೊಂದಬೇಕು ಎಂದು ತಹಶೀಲ್ದಾರ್ ಹುಸೇನ್ ಸರಕಾವಸ್ ಹೇಳಿದರು.


ಪಟ್ಟಣದ ಡಾ. ರಾಜ್ ಕಲಾಕ್ಷೇತ್ರದ ಮುಂಭಾಗದಲ್ಲಿ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶವಾಸಿಗಳು ಎಲ್ಲರಿಗೂ ಅನ್ವಯವಾಗುವ ಅತ್ಯಂತ ಶ್ರೇಷ್ಟ ಸಂವಿಧಾನವನ್ನು ನೀಡಿದ್ದಾರೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡುವಂತಹದ್ದು ವಿಶೇಷ ಕಾರ್ಯಕ್ರಮವಾಗಿದೆ ಎಂದರು.


ಭ್ರಾತೃತ್ವ, ಸಾಮರಸ್ಯ ಹಾಗೂ ಸಮಾನತೆಯ ಕುರಿತು ಅರಿತುಕೊಳ್ಳುವುದು ಅತಿಮುಖ್ಯ. ಇದನ್ನು ಅನುಸರಿಸಿದಾಗ ನಮ್ಮ ದೇಶದ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರ ಹೊಮ್ಮಲಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದಂದು ಸಂವಿಧಾನದ ಆಶಯ ಮತ್ತು ಮೂಲ ತತ್ವಗಳನ್ನು ಅರಿತುಕೊಳ್ಳುವ ಪ್ರಯತ್ನಕ್ಕೆ ಪ್ರತಿಯೊಬ್ಬ ನಾಗರೀಕರು ಕೈ ಜೋಡಿಸಬೇಕು. ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಜಗತ್ತಿಗೆ ಸಾರುವ ಮೂಲಕ ಮಾದರಿ ರಾಷ್ಟ್ರವಾಗಿದೆ ಎಂದರು.


ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ರವರು ಸರ್ವ ಜನಾಂಗದ ಏಳಿಗೆಗಾಗಿ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಆಶಯದಂತೆ ಎಲ್ಲರೂ ನಡೆಯಬೇಕು. ಭಾರತೀಯ ಪ್ರಜೆಗಳಾದ ನಾವು ಸಂವಿಧಾನವನ್ನು ರಕ್ಷಿಸಬೇಕು ಎಂದರು.


ಇದಕ್ಕೂ ಮೊದಲು ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದಿಂದ ಮುಖ್ಯರಸ್ತೆ ಮಾರ್ಗವಾಗಿ ಡಾ. ರಾಜ್ ಕಲಾಕ್ಷೇತ್ರದ ವರೆಗೆ ಜಾಥಾ ನಡೆಸಲಾಯಿತು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್, ತಾಪಂ ಇಒ ಡಾ. ಎನ್.ಆರ್. ಪ್ರದೀಪ್ ಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಜಿ. ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗೇರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಎಂ. ರೇವಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ, ಕ್ಷೇತ್ರ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್, ಪುರಸಭೆ ಮುಖ್ಯಾಧಿಕಾರಿ ಟಿ. ಬಾಲಚಂದ್ರ, ದಲಿತ ಮುಖಂಡರಾದ ಶ್ಯಾಮಣ್ಣ ತುಡಿನೀರು, ಬಸವರಾಜ ಹಶ್ವಿ, ದಿನೇಶ್ ಹಣಜಿ, ಪುರಸಭೆ ಸದಸ್ಯರಾದ ಮಧುರಾಯ್ ಜಿ. ಶೇಟ್, ಯು. ನಟರಾಜ್, ಜಯಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!