ನೂಲು ಹುಣ್ಣಿಮೆ ; ಚಂದ್ರಗುತ್ತಿಗೆ ಸಾವಿರಾರು ಭಕ್ತರ ಆಗಮನ, ವಿಶೇಷ ಪೂಜೆ

0 40

ಸೊರಬ : ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಶ್ರಾವಣ ಮಾಸದ ನೂಲು ಹುಣ್ಣಿಮೆಯ ಪ್ರಯುಕ್ತ ಸಾವಿರಾರು ಭಕ್ತರು ಗುರುವಾರ ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಹಾವೇರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಸಿದ್ದಾಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಲೆನಾಡಿನ ಆರಾಧ್ಯ ಶಕ್ತಿ ದೇವಿ ರೇಣುಕಾದೇವಿಯ ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವರ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು‌. ಧಾರ್ಮಿಕ ಸೇವೆ, ಹರಕೆ, ಸಲ್ಲಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ರಥಬೀದಿಯಲ್ಲಿ ಅಂಗಡಿ ಮುಂಗಟ್ಟುಗಳ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯಿತು. ಕೆಲ ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯವೂ ಕಂಡು ಬಂದಿತು.

ನೂಲು ಹುಣ್ಣಿಮೆಯ ಪ್ರಯುಕ್ತವಾಗಿ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಶ್ರೀ ರೇಣುಕಾಂಬ ಕ್ಷೇತ್ರಕ್ಕೆ ಆಗಮಿಸಿದ್ದು, ಇತ್ತೀಚೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಜಿ.ಕೆ. ಮಿಥುನ್ ಕುಮಾರ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಶ್ರೀ ರೇಣುಕಾಂಬ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯವರು ಸಹಕರಿಸಿದರು.

“ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಕಂದಾಯ ಇಲಾಖೆ ಸಿಬ್ಬಂದಿ ದೇವಾಲಯಕ್ಕೆ ಬಂದ ಭಕ್ತರಿಗೆ ಅನಾನುಕೂಲವಾಗಂತೆ ಕಾರ್ಯ‌ನಿರ್ವಹಿಸಿದರು. ಜೊತೆಗೆ ಭಕ್ತರಿಗೆ ಕೊಳವೆ ಬಾವಿ ಮುಖೇನ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು.”
– ವಿ.ಎಲ್. ಶಿವಪ್ರಸಾದ್ ಶ್ರೀ ರೇಣುಕಾಂಬ ದೇವಸ್ಥಾನದ ಆಡಳಿತ ಅಧಿಕಾರಿ

Leave A Reply

Your email address will not be published.

error: Content is protected !!