ಮಣಿಪುರದಲ್ಲಿ ನಡೆದ ಮಹಿಳಾ ದೌರ್ಜನ್ಯ ಖಂಡಿಸಿ ದಸಂಸ ಪ್ರತಿಭಟನೆ

0 40

ಸೊರಬ: ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷ, ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಯುವತಿಯರ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಗುರುವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಡಿಎಸ್ಎಸ್ ತಾಲೂಕು ಸಂಚಾಲಕ ಬಸವರಾಜ ಹಶ್ವಿ ಮಾತನಾಡಿ, ಇತ್ತೀಚಿನ ಕೆಲವು ತಿಂಗಳುಗಳಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸೆ, ದೌರ್ಜನ್ಯ ಹಾಗೂ ಭದ್ರತಾ ಪಡೆಯಿಂದಲೇ ನಡೆಯುತ್ತಿರುವ ದಬ್ಬಾಳಿಕೆಯನ್ನು ಪೂರ್ವ ಯೋಚಿತವಾಗಿಯೇ ಬಿಜೆಪಿಯ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವುದು ಖಂಡನೀಯ. ಕೂಡಲೇ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು. ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲರಾದ ಅಲ್ಲಿನ ಸಿಎಂ ಬೀರನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ತಾಲೂಕು ಸಂಘಟನಾ ಸಂಚಾಲಕ ದಿನೇಶ್ ಹಶ್ವಿ ಮಾತನಾಡಿ, ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ದುಷ್ಕರ್ಮಿಗಳಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಘಟನೆಗಳಿಂದ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಆರೋಪಿಸಿದರು.

ನಂತರ ತಹಶೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಜಿಲ್ಲಾ ಮಹಿಳಾ ಸಂಚಾಲಕಿ ಗಂಗಾಮಾಳಮ್ಮ, ತಾಲೂಕು ಗೌರವ ಸಲಹೆಗಾರ ರಶೀದ್ ಸಾಬ್, ಪ್ರಮುಖರಾದ ಪರಶುರಾಮ ಮೂಗೂರು, ಗುತ್ಯಪ್ಪ ತಾಳಗುಪ್ಪ, ಶೇಖರ್ ಚಿಕ್ಕಶಕುನ, ರಮೇಶ್ ನಲ್ಲಿಕೊಪ್ಪ, ಚಂದ್ರು ಸಮನವಳ್ಳಿ, ಪ್ರದೀಪ ಸಾಬಾರ, ರಮೇಶ್ ಸಮನವಳ್ಳಿ, ಸುಧಾ ಮೂಗೂರು, ಜಯಪ್ಪ ಸಾಲಗಿ, ನಾಗರಾಜ ಕುಬಟೂರು ಸೇರಿದಂತೆ ಇತರರಿದ್ದರು.

Leave A Reply

Your email address will not be published.

error: Content is protected !!