ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಹರಿತವಾದ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಲು ಯತ್ನಿಸಿದ ಆರೋಪದ ಮೇರೆಗೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಸಮೀಪ ಕೆಲ ಯುವಕರು ಉದ್ದವಾದ ಹರಿತ ಆಯುಧಗಳನ್ನು ಹಿಡಿದುಕೊಂಡು ಓಡಾಡುತ್ತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
‘Moseen Qureshin’ ಎಂಬ ಹೆಸರಿನ ಫೇಸ್‌ಬುಕ್ ಪ್ರೊಫೈಲ್‌ನಿಂದ ಈ ದೃಶ್ಯಗಳನ್ನು ಹಂಚಿಕೊಳ್ಳಲಾಗಿತ್ತು ಎನ್ನಲಾಗಿದೆ. ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ಸಾಗುತ್ತಿರುವುದು ಕಂಡುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಗಮನಿಸಿದ ಕೋಟೆ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಲಷ್ಕರ್ ಮೊಹಲ್ಲಾ ನಿವಾಸಿ ಮೊಸೀನ್ ಖುರೇಷಿನ್ ಎಂಬಾತನನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಆರೋಪಿಯ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ, 1959ರ ಕಲಂ 25(1)(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಡಿಯೋದಲ್ಲಿದ್ದ ಇತರ ಯುವಕರ ಪತ್ತೆಗಾಗಿ ಕೋಟೆ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

