ಸೊರಬ

ಮಳೆಮಾಪನ ಕೇಂದ್ರಗಳನ್ನು ತಕ್ಷಣ ಸರಿಪಡಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಸೊರಬ,: ಕಳೆದ ಸಾಲಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ನ್ಯಾಯೋಚಿತ ಬೆಳೆವಿಮೆ ಪರಿಹಾರ ದೊರೆಯಬೇಕು. ತಪ್ಪಾದ ಮಳೆ ಅಂಕಿ-ಅಂಶಗಳಿಂದ ರೈತರಿಗೆ ಮತ್ತೊಮ್ಮೆ ಅನ್ಯಾಯವಾಗಬಾರದು ಎಂದು ಸಚಿವ ಎಸ್. ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೊರಬ ತಾಲೂಕು ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಬರ ಮತ್ತು ಅತಿವೃಷ್ಟಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದುರಸ್ತಿಯಾಗದೇ ಉಳಿದಿರುವ ಮಳೆಮಾಪನ ಕೇಂದ್ರಗಳನ್ನು ತಕ್ಷಣ ಸರಿಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ತಪ್ಪಾದ ಮಳೆ ಅಂಕಿ-ಅಂಶದಿಂದ ರೈತರಿಗೆ ಅನ್ಯಾಯವಾಗಬಾರದು

ಕಳೆದ ಸಾಲಿನಲ್ಲಿ ಕೆಲ ಮಳೆಮಾಪನ ಕೇಂದ್ರಗಳಲ್ಲಿ ತಪ್ಪಾದ ಅಂಕಿ-ಅಂಶಗಳು ದಾಖಲಾಗಿರುವುದರಿಂದ, ಪ್ರಸಕ್ತ ಸಾಲಿನ ಬೆಳೆಹಾನಿ ಪರಿಹಾರ ನಿರ್ಧಾರದಲ್ಲಿ ಯಾವುದೇ ವ್ಯತ್ಯಾಸ ಉಂಟಾಗದಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಸಚಿವರು ಹೇಳಿದರು.

ಪ್ರಸಕ್ತ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸುರಿದ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಕುರಿತು ವಿಸ್ತೃತ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಈ ವಿಷಯವನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿಯೂ ಹೇಳಿದರು.

ಸೊರಬದಲ್ಲಿ ಶೇ.32ರಷ್ಟು ಮಳೆ ಕೊರತೆ

ಪ್ರಸಕ್ತ ಸಾಲಿನ ಮುಂಗಾರು ದುರ್ಬಲವಾಗಿರುವುದರಿಂದ ಸೊರಬ ತಾಲೂಕಿನಲ್ಲಿ ಶೇ.32ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಇದರ ಪರಿಣಾಮ ಕೆರೆ, ಕಟ್ಟೆ ಮತ್ತು ಕಾಲುವೆಗಳಲ್ಲಿ ನೀರಿನ ಸಂಗ್ರಹ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆಯಾಗಿದೆ. ತಾಲೂಕಿನ ಪ್ರಮುಖ ಬೆಳೆಗಳಲ್ಲಿ ಒಂದಾದ ಮೆಕ್ಕೆಜೋಳ ಬಿತ್ತನೆಯಲ್ಲಿಯೂ ಹಿನ್ನಡೆ ಕಂಡುಬಂದಿದೆ.

ಸಕಾಲದಲ್ಲಿ ಮಳೆ ಬಾರದ ಕಾರಣ ಬೆಳೆಗಳ ಬೆಳವಣಿಗೆ ಕುಂಠಿತವಾಗಿದ್ದು, ನಿರೀಕ್ಷಿತ ಪ್ರಮಾಣದ ಇಳುವರಿ ಸಿಗುವುದು ಕಷ್ಟವಾಗಬಹುದು ಎಂದು ಸಚಿವರು ಹೇಳಿದರು.

ಭತ್ತದ ಬಿತ್ತನೆ ಕಾರ್ಯವೂ ನಿಧಾನಗತಿಯಲ್ಲಿ ಸಾಗುತ್ತಿದ್ದು, ಆಗಸ್ಟ್ ಎರಡನೇ ವಾರದೊಳಗೆ ಶೇ.100ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಲಾಯಿತು.

ಅಡಿಕೆ ಬೆಳೆಗಳಲ್ಲಿ ಚೇತರಿಕೆ

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿರುವುದರಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಳಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಜಾನುವಾರುಗಳಿಗೆ ಮುಂದಿನ 40 ವಾರಗಳವರೆಗೆ ಮೇವು ಕೊರತೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಅಗತ್ಯವಿರುವ ಬೀಜ ಮತ್ತು ರಸಗೊಬ್ಬರದ ಕೊರತೆ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ರಸಗೊಬ್ಬರ ವಿತರಣೆ ನಡೆಯುತ್ತಿದೆ ಎಂದು ತಿಳಿಸಲಾಯಿತು.

ಹಿಡಿಮುಂಡಿಗೆ ರೋಗದ ಬಗ್ಗೆ ರೈತರಿಗೆ ಜಾಗೃತಿ

ಅಡಿಕೆ ಬೆಳೆಯಲ್ಲಿ ಕಾಣಿಸಿಕೊಳ್ಳುವ ಹಿಡಿಮುಂಡಿಗೆ ಸಮಸ್ಯೆ ಕುರಿತು ರೈತರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಸಚಿವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಅವಧಿಯಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಿದ ಪರಿಣಾಮ ಜಿಲ್ಲೆ ಮಾತ್ರವಲ್ಲದೆ ರಾಜ್ಯದಾದ್ಯಂತ ಅಡಿಕೆ ಬೆಳೆ ಪ್ರದೇಶ ವಿಸ್ತಾರವಾಗಿದೆ. ಇದರ ಕುರಿತು ತುಲನಾತ್ಮಕ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಬೇಡ

ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗುವ ರಸ್ತೆ, ಸೇತುವೆ ಹಾಗೂ ಕಟ್ಟಡ ಕಾಮಗಾರಿಗಳು ಗುಣಮಟ್ಟದಿಂದಿರಬೇಕು. ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಅತ್ಯಂತ ಕಡಿಮೆ ಮೊತ್ತಕ್ಕೆ ಟೆಂಡರ್ ಪಡೆದು ಕಳಪೆ ಕಾಮಗಾರಿ ಮಾಡಿದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ವಿದ್ಯುತ್ ಸಮಸ್ಯೆಗೆ ಕ್ರಮ

ಜಿಲ್ಲೆಯಲ್ಲೇ ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ ಜನರು ವಿದ್ಯುತ್ ಸಮಸ್ಯೆ ಎದುರಿಸುವುದು ಸರಿಯಲ್ಲ. ವಿದ್ಯುತ್ ಸರಬರಾಜಿನಲ್ಲಿರುವ ದೋಷಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಏತ ನೀರಾವರಿ ಯೋಜನೆಗಳ ಮೂಲಕ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment