Ripponpete

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ಸದುಪಯೋಗಿ ವ್ಯಕ್ತಿತ್ವ ರೂಪಿಸಿಕೊಳ್ಳಲಿ ; ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ಪೋಷಕರು ಮಕ್ಕಳ ಮೇಲೆ ಅಪಾರ ಭರವಸೆಯನ್ನು ಇಟ್ಟುಕೊಂಡಿರುವುದರಿಂದ, ವಿದ್ಯಾರ್ಥಿಗಳು ಆ ನಂಬಿಕೆಯನ್ನು ಉಳಿಸಿಕೊಂಡು ಉತ್ತಮ ಶಿಕ್ಷಣದ ಮೂಲಕ ಸುವ್ಯವಸ್ಥಿತ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ, ಕ್ರೀಡಾ, ರೋವರ್-ರೇಂಜರ್ಸ್ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಸರ್ಕಾರ ಮತ್ತು ಪೋಷಕರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವಿಶೇಷ ಆದ್ಯತೆ ನೀಡುತ್ತಿರುವುದನ್ನು ಉಲ್ಲೇಖಿಸಿದ ಅವರು, ಕುಟುಂಬದ ಸಂಕಷ್ಟಗಳನ್ನು ಮಕ್ಕಳ ಗಮನಕ್ಕೆ ತರದೆ, ಅವರ ಭವಿಷ್ಯಕ್ಕಾಗಿ ಶ್ರಮಿಸುವ ಪೋಷಕರ ತ್ಯಾಗವನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದು ಹೇಳಿದ ಅವರು, ಅಗತ್ಯಕ್ಕಷ್ಟೇ ಮೊಬೈಲ್ ಬಳಸಿಕೊಂಡು, ಸ್ಪಷ್ಟ ಗುರಿ ಇಟ್ಟು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪದವಿ ಪೂರ್ಣಗೊಳಿಸಿದ ಯುವಜನರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಯುವನಿಧಿ” ಯೋಜನೆಯನ್ನು ಬಳಸಿಕೊಂಡು ಉದ್ಯೋಗ ದೊರೆಯುವವರೆಗೆ ಪ್ರಯೋಜನ ಪಡೆಯಬೇಕು. ಮುಂದಿನ ದಿನಗಳಲ್ಲಿ ಉತ್ತಮ ಉದ್ಯೋಗಸ್ಥರಾಗಿ ಸಮಾಜದಲ್ಲಿ ಗೌರವ ಗಳಿಸಬೇಕು ಎಂದು ಹೇಳಿದರು.

ಬಾಲ್ಯದಿಂದ ವೃತ್ತಿಜೀವನದವರೆಗೆ ಎದುರಾಗುವ ಸವಾಲುಗಳನ್ನು ಜಯಿಸಲು ಪ್ರೇರಣೆಯಾಗಿರುವ ತಂದೆ-ತಾಯಿ ಹಾಗೂ ಗುರುಹಿರಿಯರನ್ನು ಗೌರವಿಸಿ, ಅವರ ಯೋಗಕ್ಷೇಮ ನೋಡಿಕೊಳ್ಳುವುದು ವಿದ್ಯಾರ್ಥಿಗಳ ಕರ್ತವ್ಯ ಎಂದು ಹೇಳಿ ಆಗ ಮಾತ್ರ ಶಿಕ್ಷಣಕ್ಕೆ ಸಾರ್ಥಕತೆ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ವಿವಿಧ ಚಟುವಟಿಕೆಗಳು ನಿರಾತಂಕವಾಗಿ ನಡೆಯಲು ಹೈಟೆಕ್ ಆಡಿಟೋರಿಯಂ ನಿರ್ಮಾಣಕ್ಕೆ ಭರವಸೆ ನೀಡಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಣ್ಣೂರು ಟಾಕಪ್ಪ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ನಮ್ಮ ಪ್ರಾಚೀನ ಜಾನಪದ ಕಲೆಗಳನ್ನು ಅರಿತುಕೊಳ್ಳಬೇಕು. ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಯುವಕರ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ಅತ್ಯುತ್ತಮ ಅಂಕಗಳಿಸಿದ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಪ್ರಾಂಶುಪಾಲ ಬಿ.ಎಲ್. ರಾಜು, ಸಿಡಿಸಿ ಉಪಾಧ್ಯಕ್ಷ ಶ್ರೀನಿವಾಸ ಆಚಾರ್, ಸದಸ್ಯರಾದ ಮಂಜುನಾಥ ಕಾಮತ್, ಫ್ಯಾನ್ಸಿ ರಮೇಶ್, ರಘು, ಪ್ರಾಧ್ಯಾಪಕರಾದ ಡಾ. ಎಂ. ಕುಮಾರ, ಡಾ. ರಜನಿಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!