ಹೊಸನಗರ ; ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಜೊತೆಗೆ ನಿರಂತರವಾಗಿ ಆ ಕಾಲೇಜಿನೊಂದಿಗೆ ಸಂಪರ್ಕ ಹೊಂದಿರಬೇಕು. ಇದು ಕಾಲೇಜಿನ ಏಳಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಬುಧವಾರ ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ರೇಂಜರ್ಸ್ ಮತ್ತು ರೋವರ್ಸ್, ಕ್ರೀಡಾ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ವಿವಿಧ ಚಟುವಟಿಕೆಗಳ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸದೃಢ ದೇಹ, ಉತ್ತಮ ಆರೋಗ್ಯ ಹೊಂದುವ ಮೂಲಕ, ರಾಷ್ಟ್ರೀಯ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ವಿದ್ಯಾರ್ಥಿ ಜೀವನದಲ್ಲಿ ತುಂಟಾಟ ಸಹಜ. ತುಂಟಾಟದೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕಡೆ ಪ್ರತಿಯೊಬ್ಬರೂ ಗಮನಹರಿಸುವಂತೆ ವಿದ್ಯಾರ್ಥಿಗಳಿಗೆ ಬೇಳೂರು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳಲ್ಲಿ ಸಂಯಮ ಹಾಗು ಸದೃಢ ಆರೋಗ್ಯ ವೃದ್ಧಿಸಲು ಕ್ರೀಡೆ ಸಹಕಾರಿ ಆಗಿದೆ. ಅಲ್ಲದೇ ಭವಿಷ್ಯದಲ್ಲಿ ಸಮಾಜ ಸತ್ಪ್ರಜೆಯಾಗಿ ರೂಪುಗೊಳ್ಳಲು ಕ್ರೀಡೆ ಸಹಕಾರಿ ಎಂದರು. ಅಂತೆಯೇ, ಒರ್ವ ವಿದ್ಯಾರ್ಥಿ ಎಷ್ಟೇ ದೊಡ್ಡ ಹುದ್ದೆ ಅಲಂಕರಿಸಿದರೂ ತನಗೆ ವಿದ್ಯೆ ಕಲಿಸಿದ ಗುರುವನ್ನು ಗೌರವಿಸಬೇಕೆಂದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಸ್ತಿಕಟ್ಟೆ ಸುಬ್ರಮಣ್ಯ, ಗ್ರಾಮ ಪಂಚಾಯತ್ ಸದಸ್ಯ ಮಹೇಂದ್ರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶ್ವಿನಿ ಕುಮಾರ್, ಪ್ರಾಂಶುಪಾಲ ಡಾ.ಕೆ ಉಮೇಶ್, ಮುಂತಾದವರು ಉಪಸ್ಥಿತರಿದ್ದರು.