ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರವನ್ನ ಮರು ಸ್ಥಾಪಿಸಲು ಆಗ್ರಹಿಸಿ ಹೊಸನಗರ ಮಾಜಿ ಶಾಸಕ ಹಾಗೂ 96 ವರ್ಷದ ವಯೋವೃದ್ದರಾದ ಬಿ.ಸ್ವಾಮಿರಾವ್ ಸುಮಾರು 70 ಕಿ.ಮೀ ದೂರದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಮುಖಂಡರುಗಳು ಭಾಗವಹಿಸುವ ಮೂಲಕ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಟ್ರಸ್ಟಿ ಕಲ್ಲೂರು ಮೇಘರಾಜ್ ಘೋಷಿಸಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1967 ರಲ್ಲಿ ಆಸ್ತಿತ್ವಕ್ಕೆ ಬಂದಂತಹ ಹೊಸನಗರ ವಿಧಾನಸಭಾ ಕ್ಷೇತ್ರವು ಭಾರತದ ವಿಧಾನಸಭೆಯ ಸ್ಥಾನಗಳಲ್ಲಿ ಒಂದಾಗಿತ್ತು. 2008 ನಂತರ ಕ್ಷೇತ್ರ ಪನರ್ವಿಂಗಡಣೆಯಲ್ಲಿ ರಾಜಕೀಯ ಪ್ರಭಾವವಿಲ್ಲದ ಕಾರಣ ಹೊಸನಗರ ವಿಧಾನಸಭಾ ಕ್ಷೇತ್ರವನ್ನ ಆರ್ಧಭಾಗ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೂ ಇನ್ನೂ ಅರ್ಧ ಸಾಗರ ವಿಧಾನಸಭಾ ಕ್ಷೇತ್ರಕ್ಕೂ ಸೇರಿಸಿ ನಮ್ಮ ವಿಧಾನಸಭಾ ಕ್ಷೇತ್ರವನ್ನು ರದ್ದು ಮಾಡಿ ಅನ್ಯಾಯ ಮಾಡಲಾಗಿದೆ. ನಮ್ಮ ಹೊಸನಗರ ತಾಲ್ಲೂಕಿಗೆ ರಾಜ್ಯ ಮತ್ತು ಕೇಂದ್ರದಿಂದ ಅನುದಾನದ ಹಣ ಹರಿದು ಬಾರದೆ ಅಭಿವೃದ್ದಿ ಕಾರ್ಯಗಳು ಕುಂಠಿತವಾಗಿವೆ. ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರನ್ನು ಸಣ್ಣಪುಟ್ಟ ಕೆಲಸಗಳಿಗೂ ಹೊಸನಗರ ತಾಲ್ಲೂಕಿನ ಜನತೆ ಹುಡುಕಿಕೊಂಡು ಹೋಗುವ ದುಸ್ಥಿತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರವನ್ನ ಪುನಃ ರಚನೆ ಮಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮೇಲೆ ಒತ್ತಡ ತರುವುದು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಮಾಜಿ ಶಾಸಕರಾದ ಬಿ.ಸ್ವಾಮಿರಾವ್ ಹೊಸನಗರದಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಬೆಂಬಲಿಸುವ ಮೂಲಕ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಘೋಷಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರ ಟ್ರಸ್ಟ್‌ನ ಕಲ್ಲೂರು ಮೇಘರಾಜ್ ತಿಳಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





