ತರೀಕೆರೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಗೂ ಚುನಾವಣಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ.
ಶುಕ್ರವಾರ ಸಂಜೆ ತರೀಕೆರೆ ತಾಲೂಕಿನ ಸಿ.ಕೆ.ಹಳ್ಳಿ ಗ್ರಾಮದಲ್ಲಿ ಟಾಟಾ ಏಸ್ ವಾಹನವೊಂದನ್ನು ತಪಾಸಣೆ ನಡೆಸಿದ ವೇಳೆ ವಾಹನದಲ್ಲಿ ಸಮರ್ಪಕವಾದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.44 ಕೋಟಿ ರೂ. ಮೌಲ್ಯದ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಇರುವುದು ಪತ್ತೆಯಾಗಿದ್ದು, ಚುನಾವಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಾಹನ ಸಹಿತ ಚಿನ್ನ, ಬೆಳ್ಳಿಯ ಆಭರಣಗಳನ್ನು ಜಪ್ತಿ ಮಾಡಿದ್ದಾರೆಂದು ತಿಳಿದು ಬಂದಿದೆ.
ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ರಮೇಶ್, ಎಸ್ಪಿ ಉಮಾ ಪ್ರಶಾಂತ್, ಜಿಪಂ ಸಿಇಒ ಪ್ರಭು ಭೇಟಿ ನೀಡಿ ಪರಿಶೀಲನೆ ನಡೆಸಿದರು.