ರಿಪ್ಪನ್‌ಪೇಟೆ ; ಪ್ರತಿಭಾ ಕಾರಂಜಿಯೂ ಮಕ್ಕಳಲ್ಲಿ ಅಡಗಿರುವ ಬಹುಮುಖ ಪ್ರತಿಭೆಯನ್ನು ಗುರುತಿಸಲು ಸರ್ಕಾರ ಮಾಡಿದ ಮಹತ್ತರ ಯೋಜನೆಯಾಗಿದೆ ಎಂದು ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ ಹೇಳಿದರು.
ಅವರು ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರೇಮಟ್ಟಿಯಲ್ಲಿ ನಡೆದ ಕೋಟೆತಾರಿಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಅಂತರ್ಗತ ಜ್ಞಾನದ ಅನಾವರಣವೇ ಪ್ರತಿಭಾ ಕಾರಂಜಿ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಸಹಪಠ್ಯ ಚಟುವಟಿಕೆಗಳನ್ನು ಹೊರ ತರಲು ಸರ್ಕಾರ ಅನೇಕ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಕಲಿಕೆಯ ಕಡೆಗೆ ಹೆಚ್ಚಿನ ಗಮನಹರಿಸಿ ವಿದ್ಯಾರ್ಥಿಗಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಪೋಷಕರು, ಶಿಕ್ಷಕರು ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುವ ಎಲ್ಲಾ ಸೌಲಭ್ಯಗಳನ್ನು ಪಡೆದು ಉತ್ತಮ ಕಲಿಕೆಯನ್ನು ಅಂತರ್ಗತ ಮಾಡಿಕೊಳ್ಳವಂತೆ ಅವರು ಈ ಸಂದರ್ಭದಲ್ಲಿ ಕಿವಿಮಾತು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿಯ ಸದಸ್ಯ ವೆಂಕಟಾಚಲ, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಮತ್ತು ಪೋಷಕರಿಗೆ ಹಣಕಾಸಿನ ಹೊರೆ ಕಡಿಮೆಯಾಗುತ್ತದೆ ಎಂದು ತಿಳಿಸಿದ ಅವರು, ಸರ್ಕಾರದ ಯೋಜನೆಗಳು ಅತ್ಯಂತ ಮಹತ್ವಪೂರ್ಣದಾಗಿದ್ದು ಅವುಗಳನ್ನು ಸಾಕಾರಗೊಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ ಅಧ್ಯಕ್ಷ ತೀರ್ಥೇಶ್ ಮಾತನಾಡಿ, ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಜೊತೆಗೆ ಸಹ ಪಠ್ಯ ಚಟುವಟಿಕೆಗಳು ಅತ್ಯಂತ ಮಹತ್ವ ಪೂರ್ಣದ್ದಾಗಿದೆ. ಅವುಗಳನ್ನು ಗುರುತಿಸುವ ಕಾರ್ಯ ಇಲಾಖೆ ಮಾಡುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದು ತಿಳಿಸಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಉತ್ತಮ ಕೆಲಸಗಳಿಗೆ ಬಳಸಿಕೊಂಡಲ್ಲಿ ತಾವು ಬಲಗೊಳ್ಳುವುದರ ಜೊತೆಗೆ ದೇಶವನ್ನು ಬಲಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಿ.ಆರ್.ಪಿ ಸಂತೋಷ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರುವ ಜೊತೆಗೆ ಅವರಲ್ಲಿ ಕಲಿಕೆಗೆ ಹೊಸದಾದ ಜೀವನ ಕೌಶಲ್ಯ ಹೊಂದಲು ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಸದಸ್ಯೆ ನಳಿನಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶೈಲಜಾ, ಗ್ರಾಮದ ಹಿರಿಯರಾದ ರೇಣುಕಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ಅರವಿಂದ್ ಭಟ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಜಗದೀಶ್ ಕಾಗಿನೆಲೆ, ಸಂಘಟನಾ ಕಾರ್ಯದರ್ಶಿ ನಾಗರಾಜಪ್ಪ ಎಚ್ ಬಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ್ ಎಚ್ ಟಿ, ಮಂಜುನಾಥ್, ಅರವಿಂದ್ ಎಸ್ ಎನ್, ವಂದನಾ ಹಾಗೂ ವಿವಿಧ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಪಾಲಕರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಶಿಕ್ಷಕಿ ಆಶಾರಾಣಿ ನಿರೂಪಿಸಿದರು. ಮುಖ್ಯ ಶಿಕ್ಷಕ ಮಂಜುನಾಥ ಬಿ ಎಂ ಸ್ವಾಗತಿಸಿದರು. ಶಿಕ್ಷಕ ರಾಜೇಶ್ವರಪ್ಪ ವಂದಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





