ಹೊಸನಗರ : ಪ್ರಜೆಗಳೇ ಆಡಳಿತದ ಕೇಂದ್ರಬಿಂದುವಾಗಿರುವ ಪ್ರಜಾಪ್ರಭುತ್ವದ ಮೌಲ್ಯಗಳು, ಹಕ್ಕುಗಳು ಹಾಗೂ ಜವಾಬ್ದಾರಿಗಳ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸದುದ್ದೇಶದಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪವನ್‌ಕುಮಾರ್ ತಿಳಿಸಿದರು.
ಅವರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. “ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ ನಡೆಯುವ ಆಡಳಿತವೇ ನೈಜ ಪ್ರಜಾಪ್ರಭುತ್ವ” ಎಂದು ಅವರು ಈ ಸಂದರ್ಭದಲ್ಲಿ ಬಣ್ಣಿಸಿದರು.
ಈ ಅರ್ಥಪೂರ್ಣ ಕಾರ್ಯಕ್ರಮವನ್ನು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಜಂಟಿ ಆಶ್ರಯದಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಮುಖರಾಗಿ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ರಂಗನಾಥ್, ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-2 ಸಹಾಯಕ ನಿರ್ದೇಶಕಿ ಗೀತಾ ಬಿ.ಎಂ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಚಂದ್ರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾಧಿಕಾರಿ ಸತೀಶ್ ಉಪಸ್ಥಿತರಿದ್ದರು. ಇವರೊಂದಿಗೆ ಕನ್ನಡ ಉಪನ್ಯಾಸಕರುಗಳಾದ ಡಾ. ಕುಮಾರ್ ಎಂ.ಎಂ, ಡಾ. ಶ್ರೀಪತಿ ಹಳಗುಂದ, ಡಾ. ಅಂಜಲಿ ಅಶ್ವಿನಿಕುಮಾರ್, ರಾಘವೇಂದ್ರ ಕೆ.ಎಸ್ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

