ಶಿಕಾರಿಪುರ: ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಸ್ವಗ್ರಾಮಕ್ಕೆ ಮರಳುತ್ತಿದ್ದ ಕಾರೊಂದು ಕ್ಯಾಂಟರ್‌ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರು ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ದಾರುಣ ಘಟನೆ ಶಿಕಾರಿಪುರ ತಾಲೂಕಿನ ತರಲಘಟ್ಟ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಈ ಭೀಕರ ದುರಂತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿರಾಳಕೊಪ್ಪ ಸಮೀಪದ ಮುತ್ತಿಗೆ ಗ್ರಾಮದ ನಿವಾಸಿಗಳಾದ ಕಾರು ಚಾಲಕ ಸಿದ್ದು (34) ಹಾಗೂ ಲಲಿತಮ್ಮ (65) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಅದೇ ಗ್ರಾಮದ ಉಜ್ಜಪ್ಪ (74), ಹನುಮಂತಪ್ಪ (65) ಹಾಗೂ ಜಯಮ್ಮ (55) ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಈ ಪೈಕಿ ಜಯಮ್ಮ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ವಿವರ:
ಮುತ್ತಿಗೆ ಗ್ರಾಮದ ಈ ಐವರು ಕಾರ್ಯನಿಮಿತ್ತ ಶಿವಮೊಗ್ಗದ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿಂದ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಶಿಕಾರಿಪುರ ಮಾರ್ಗವಾಗಿ ತಮ್ಮೂರಿಗೆ ವಾಪಸಾಗುತ್ತಿದ್ದರು. ಈ ಸಂದರ್ಭದಲ್ಲಿ ತರಲಘಟ್ಟ ಕ್ಯಾಂಪ್ ಸಮೀಪ, ಅಡಿಕೆ ಲೋಡ್ ತುಂಬಿಕೊಂಡು ಶಿವಮೊಗ್ಗದ ಕಡೆಗೆ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಶಿಕಾರಿಪುರ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

