ಶಿವಮೊಗ್ಗ: ಆಶ್ರಯ ಯೋಜನೆಯಡಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಹಾಗೂ ಫಲಾನುಭವಿಗಳ ತೊಡಕುಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಕುರಿತು ಅಕ್ಟೋಬರ್ 29ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಶ್ರಯ ಮನೆಗಳ ವಿಚಾರವಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಚರ್ಚಿಸಿದ್ದೇನೆ. ಈ ಯೋಜನೆಗಾಗಿ ಈಶ್ವರಪ್ಪ ಅವರು ಕೂಡ ಸಾಕಷ್ಟು ಶ್ರಮಿಸಿದ್ದಾರೆ. ಸದ್ಯ ಯೋಜನೆಯಲ್ಲಿ ತಲೆದೋರಿರುವ ಗೊಂದಲ ಹಾಗೂ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಆದಷ್ಟು ಬೇಗ ಇತ್ಯರ್ಥಪಡಿಸಲಾಗುವುದು ಎಂದರು.
ಕಾಮಗಾರಿ ಮುಗಿಸಲು ಗುತ್ತಿಗೆದಾರರು ಹೆಚ್ಚಿನ ಸಮಯ ತೆಗೆದುಕೊಂಡಿರುವುದರಲ್ಲಿ ಸರ್ಕಾರದ ಲೋಪವಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಕೈಗೆತ್ತಿಕೊಂಡಿರುವ ಎಲ್ಲಾ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿದ್ಯುತ್ ಅಭಾವ ಮತ್ತು ಬರ ನಿರ್ವಹಣೆ:
ರಾಜ್ಯದ ಬರ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿದ ಅವರು, ಬರ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರವೂ ಹೆಚ್ಚಿನ ಕಾಳಜಿ ವಹಿಸಿ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು. ಮಳೆ ಕೊರತೆಯಿಂದಾಗಿ ಜಲವಿದ್ಯುತ್ ಸೇರಿದಂತೆ ಒಟ್ಟಾರೆ ವಿದ್ಯುತ್ ಉತ್ಪಾದನೆಯಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ಪ್ರಸ್ತುತ ಸೌರಶಕ್ತಿಯ ಬಳಕೆ ಹೆಚ್ಚಿದ್ದರೂ, ವಿದ್ಯುತ್ ಬೇಡಿಕೆಯ ಪ್ರಮಾಣವೂ ಭಾರೀ ಮಟ್ಟದಲ್ಲಿ ಏರಿಕೆಯಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಸುವುದು ಸೇರಿದಂತೆ, ಮುಂದೆ ಎದುರಾಗಬಹುದಾದ ಸವಾಲುಗಳತ್ತ ಗಮನಹರಿಸುವ ಅಗತ್ಯವಿದೆ ಎಂದು ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

